ಇತ್ತೀಚಿನ ಸುದ್ದಿಸಿನಿಮಾ

ಅಭಿನಯ ಸರಸ್ವತಿ ಬಿ ಸರೋಜಾದೇವಿ ಇನ್ನಿಲ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ವಿಧಿವಶ

ಜನವರಿ 7, 1938ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಇವರು ಸ್ಯಾಂಡಲ್​​ವುಡ್​ ಅಲ್ಲದೇ ಬಹುಭಾಷಾ ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿದ್ದರು. ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಇವರೀಗ ಇಹಲೋಕದ ಪಯಣ ಮುಗಿಸಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳೂ ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

6 ದಶಕ, ಬಹುಭಾಷೆ, 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಮೋಘ ಅಭಿನಯ: ಅಭಿನಯ ಸರಸ್ವತಿ ಎಂದೇ ಖ್ಯಾತರಾದ ಬಿ.ಸರೋಜಾದೇವಿ ಅವರು ದಕ್ಷಿಣ ಭಾರತದ ಧೀಮಂತ ಅಭಿನೇತ್ರಿಯಲ್ಲೊಬ್ಬರಾಗಿ ಗುರುತಿಸಿಕೊಂಡವರು. ಸುಮಾರು 6 ದಶಕಗಳ ಕಾಲ ಭಾರತೀಯ ಚಿತ್ರರಂಗಕ್ಕೆ ಸೇವೆ ಒದಗಿಸಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಪ್ರತಿಷ್ಠಿತ ಪದ್ಮಭೂಷಣ ಪುರಸ್ಕೃತರು: ತಮ್ಮ ಅಮೋಘ ಅಭಿನಯಕ್ಕೆ ಹಲವು ಉನ್ನತ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾರತ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಭೂಷಣ ಪುರಸ್ಕೃತರೂ ಹೌದು.

17ನೇ ವಯಸ್ಸಿನಲ್ಲಿಯೇ ಚಿತ್ರರಂಗಕ್ಕೆ ಎಂಟ್ರಿ: ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ ‘ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಅಮರ ಶಿಲ್ಪಿ ಜಕಣಾಚಾರಿ, ಮಲ್ಲಮ್ಮನ ಪವಾಡ, ಭಾಗ್ಯವಂತರು, ಬಬ್ರುವಾಹನ, ಶ್ರೀ ಕೃಷ್ಣ ರುಕ್ಮಿಣಿ ಸತ್ಯಭಾಮಾ, ಲಕ್ಷ್ಮೀಸರಸ್ವತಿ, ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮಿಳಿನ ಪಾಟ್ಟಾಲಿ ಮುತ್ತು, ಪಡಿಕಥ ಮೇಥೈ, ಕಲ್ಯಾಣ ಪರಿಸು, ತೆಲುಗಿನ ಪಂಡರಿ ಭಕ್ತಲು, ದಕ್ಷಯಜ್ಞಂ, ಹಿಂದಿಯ ಆಶಾ, ಮೆಹಂದಿ ಲಗ ಕೆ ರಖನಾ, ಮಲಯಾಳಂನ ಮುತ್ತು ಮಿಂತ್ರೋ ಸೇರಿದಂತೆ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ.

ಪತಿ ಹರ್ಷ ಅವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ: ಕೊಡಿಗೆಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬ ವರ್ಗ ಸಿದ್ದತೆ ನಡೆಸುತ್ತಿದೆ. ಪತಿ ಹರ್ಷ ಅವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮಲ್ಲೆಶ್ವರಂನಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ.

ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

Related Articles

Leave a Reply

Your email address will not be published. Required fields are marked *

Back to top button