
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗುವ ಹಿನ್ನೆಲೆಯಲ್ಲಿ, ಕರ್ನಾಟಕ ಕರಾವಳಿ ಭಾಗದದ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಎಲ್ಲೆಲ್ಲಿ ಮಳೆ ಅಲರ್ಟ್ : ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಎರಡು ದಿನ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.
ಯೋಲ್ಲೋ ಅಲರ್ಟ್ : ಮಂಡ್ಯ ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಗದಗ, ರಾಯಚೂರು ಮತ್ತು ಯಾದಗಿರಿ ಮೋಡಕವಿದ ವಾತಾವರಣವಿದ್ದು, ಎರಡು ದಿನಗಳ ಕಾಲ ಯೋಲ್ಲೋ ಅಲರ್ಟ್ ಕೊಡಲಾಗಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಿರಿ : ಕರಾವಳಿಯ ಕೆಲವು ವ್ಯಾಪ್ತಿ ಪ್ರದೇಶಗಳಲ್ಲಿ ಮಳೆಯ ಜೊತೆಗೆ ಗಾಳಿಯ ವೇಗವು ಹೆಚ್ಚಾಗಲಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ : ಹಾವೇರಿ, ವಿಜಯಪುರ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಚಳಿಯ ವಾತಾವರಣ : ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದ ಕೆಲವು ಪ್ರದೇಶಗಳಲ್ಲಿ ಮಳೆಯೊಂದಿಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ಚಳಿಯ ವಾತಾವರಣದ ಅನುಭವವಾಗಲಿದೆ.
ಭಾನುವಾರ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮಂಗಳೂರು, ಶೃಂಗೇರಿ, ಕೊಪ್ಪ, ಕಳಸ, ಸೋಮವಾರಪೇಟೆ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್, ಬೆಳಗಾವಿ, ದಾವಣಗೆರೆ ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗಿದೆ.
ರಾಜಧಾನಿಯ ವಾತಾವರಣ : ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಇದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಾಡಿಕೆಗಿಂತ ಹೆಚ್ಚು ಮಳೆ ದಾಖಲು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ವಾರದ ಈಚೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಇದರ ಪರಿಣಾಮ, ಕೃಷಿ ಚಟುವಟಿಕೆ ಜೋರಾಗಿ ನಡೆಯುತ್ತಿವೆ. ಜುಲೈ 13 ರಿಂದ 14ರ ವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 23 ಸೆಂ.ಮೀ., ದಕ್ಷಿಣ ಕನ್ನಡ 33 ಹಾಗೂ ಉಡುಪಿ ಜಿಲ್ಲೆಯಲ್ಲಿ 39 ಸೆಂ.ಮೀ. ಮಳೆ ಸುರಿದಿದೆ. ಇದರಿಂದ, ವಾಡಿಕೆಗಿಂತ ಶೇ.12ರಷ್ಟು ಅಧಿಕ ಮಳೆ ಬಿದ್ದಂತಾಗಿದೆ.