
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ, ರಾಜ್ಯದ ಹಲವು ಕಡೆ ಮೋಡ ಕವಿದ ವಾತಾವರಣವಿದೆ. ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನ ಹಾಗೂ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಹಲವೆಡೆ ಇಂದು ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಗ್ರಾಮಾಂತರ, ರಾಮನಗರದ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ವಿವಿಧೆಡೆ ಮಂಗಳವಾರ ಹೆಚ್ಚಿನ ಮಳೆ ವರದಿಯಾಗಿದೆ. ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ ಆಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ರಾಜ್ಯ ಇಲಾಖೆಯು ಮುನ್ಸೂಚನೆ ಕೊಟ್ಟಿದೆ.
ನೈರುತ್ಯ ಮುಂಗಾರು ಚೇತರಿಕೆ: ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, ಈ ವಾರದ ಅಂತ್ಯದವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಕರಾವಳಿಗೆ ಹೊಂದಿಕೊಂಡಿರುವ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮಂಗಳವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಬಂಗಾಳ ಕೊಲ್ಲಿಯ ಉತ್ತರ ಭಾಗದ ಒಡಿಶಾ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿವೆ. ಇದರಿಂದ ಸೆ.7ರ ವರೆಗೆ ಕೊಪ್ಪಳ, ಬೀದರ್ ಹಾಗೂ ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಹಾಗೂ ಭಾರಿ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿತ್ತು. ಇನ್ನು ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹೇಳಿತ್ತು.
ಸೆಪ್ಟೆಂಬರ್ನಲ್ಲೂ ಅತ್ಯಧಿಕ ಮಳೆ: ದೇಶದ ಹಲವೆಡೆ ಸೆಪ್ಟೆಂಬರ್ ತಿಂಗಳಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇತ್ತೀಚೆಗೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ, ಪ್ರತಿ ವರ್ಷ ಸೆಪ್ಟೆಂಬರ್‌ನಲ್ಲಿ 167.9 ಮಿ.ಮೀ ಮಳೆಯಾಗುತ್ತದೆ. ಈ ಬಾರಿ, ಸಾಮಾನ್ಯಕ್ಕಿಂತ ಶೇ.109ರಷ್ಟು ಹೆಚ್ಚಿನ ಮಳೆಯಾಗುವ ಸೂಚನೆಗಳಿವೆ ಎಂದು ತಿಳಿಸಿತ್ತು.
ಈಶಾನ್ಯ ಭಾರತ, ಪೂರ್ವ ಭಾರತ, ದಕ್ಷಿಣ ಭಾರತ ಮತ್ತು ವಾಯುವ್ಯ ಭಾರತದ ಅನೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ದೇಶದ ಉಳಿದ ಭಾಗಗಳಲ್ಲಿ ಸಾಧಾರಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ್ದರು.
ಸೆಪ್ಟೆಂಬರ್‌ನಲ್ಲಿ ಉತ್ತರಾಖಂಡ, ದಕ್ಷಿಣ ಹರಿಯಾಣ, ದೆಹಲಿ ಮತ್ತು ಉತ್ತರ ರಾಜಸ್ಥಾನದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದು ದಿಢೀರ್ ಪ್ರವಾಹ ಮತ್ತು ಭೂಕುಸಿತಕ್ಕೆ ಕಾರಣವಾಗಬಹುದು. ಸಾಮಾನ್ಯ ಜೀವನವನ್ನು ಅಸ್ತವ್ಯಸ್ತಗೊಳಿಸಬಹುದು. ಹೆಚ್ಚಿನ ನದಿಗಳು ಉತ್ತರಾಖಂಡದಲ್ಲಿ ಹುಟ್ಟಿಕೊಳ್ಳುತ್ತವೆ. ಭಾರೀ ಮಳೆಯಿಂದಾಗಿ, ಈ ನದಿಗಳು ಉಕ್ಕಿ ಹರಿಯಬಹುದು. ಹತ್ತಿರದ ನಗರಗಳು ಮತ್ತು ಪಟ್ಟಣಗಳಲ್ಲಿ ಪ್ರವಾಹ ಸೃಷ್ಟಿಯಾಗಲಿದೆ.
ಸೆಪ್ಟೆಂಬರ್ ತಿಂಗಳ ತಾಪಮಾನ ಹೀಗಿರಲಿದೆ: ಭಾರತದಲ್ಲಿ 1980ರಿಂದ ಪ್ರತಿ ವರ್ಷವೂ ಸೆಪ್ಟೆಂಬರ್‌ನಲ್ಲಿ ಮಳೆ ಹೆಚ್ಚುತ್ತಿದೆ. 1986, 1991, 2001, 2004, 2010, 2015 ಮತ್ತು 2019 ವರ್ಷಗಳಲ್ಲಿ ಸೆಪ್ಟೆಂಬರ್‌ನಲ್ಲಿ ಕಡಿಮೆ ಮಳೆ ದಾಖಲಾಗಿದೆ. ಆ ತಿಂಗಳಲ್ಲಿ ಪಶ್ಚಿಮ ಮಧ್ಯ ಭಾರತ, ವಾಯುವ್ಯ ಭಾರತ ಮತ್ತು ದಕ್ಷಿಣ ಭಾರತದ ಹೆಚ್ಚಿನ ಭಾಗಗಳಲ್ಲಿ ಮಾಸಿಕ ಸರಾಸರಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಐಎಂಡಿ ಮಹಾನಿರ್ದೇಶಕರು ಹೇಳಿದ್ದರು.