
ಉತ್ತರಕಾಶಿ, ಮೇ 8: ಉತ್ತರಾಖಂಡದ (Uttarakhand) ಉತ್ತರಕಾಶಿ ಬಳಿ ಗುರುವಾರ ಬೆಳಿಗ್ಗೆ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ (Helicopter Crash) 5 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದೆ. ಈ ಪೈಕಿ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಚಾರ್ ಧಾಮ್ ಯಾತ್ರೆ ಆರಂಭಗೊಂಡ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ.ಹೆಲಿಕಾಪ್ಟರ್ ಪತನವನ್ನು ಉತ್ತರಕಾಶಿ ಜಿಲ್ಲಾಧಿಕಾರಿ ವಿನಯ್ ಶಂಕರ್ ಪಾಂಡೆ ದೃಢಪಡಿಸಿದ್ದಾರೆ. ಹೆಲಿಕಾಪ್ಟರ್ ಪತನದ ಸ್ಥಳದಲ್ಲಿ ಪರಿಹಾರ ತಂಡಗಳು ಉಪಸ್ಥಿತವಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ ಎಂದು ಅವರು ತಿಳಿಸಿರುವುದಾಗಿ ‘ಎಎನ್ಐ’ ಟ್ವೀಟ್ ಮಾಡಿದೆ.
ಉತ್ತರಕಾಶಿಯ ಗಂಗಾನಿ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಕೆಲವರು ಸಾವನ್ನಪ್ಪಿರುವುದು ದುಃಖ ತಂದಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಎಸ್‌ಡಿಆರ್‌ಎಫ್ ಮತ್ತು ಜಿಲ್ಲಾಡಳಿತ ತಂಡಗಳು ತಕ್ಷಣ ಸ್ಥಳಕ್ಕೆ ತಲುಪಿವೆ. ಅಪಘಾತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ದೊರೆಯಲಿ ಮತ್ತು ಮೃತರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಧಾಮಿ ಪ್ರಾರ್ಥಿಸಿದ್ದಾರೆ.
ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಮತ್ತು ಅಪಘಾತದ ತನಿಖೆ ನಡೆಸಲು ಆಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ. ಈ ನಿಟ್ಟಿನಲ್ಲಿ, ನಾನು ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಮತ್ತು ಪ್ರತಿಯೊಂದು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಧಾಮಿ ಹೇಳಿದ್ದಾರೆ.